ಮೂರು ಪುಟಗಳ ಡೆತ್ ನೋಟ್ನಲ್ಲಿ ಗಂಭೀರ ಉಲ್ಲೇಖ
ಸಂಡೂರು: ತಾಲೂಕಿನ ಚೋರನೂರು ಹೋಬಳಿಯ ಗೌರಿಪುರ ಗ್ರಾಮದಲ್ಲಿ ಕೃಷಿ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ರಾಜು ಜಿ.ಎನ್. ಅವರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಕೃಷಿ ಇಲಾಖೆಯಲ್ಲಿನ ಮೇಲಧಿಕಾರಿಗಳ ಕಿರುಕುಳದಿಂದ ಮನನೊಂದು ಅವರು ತಡರಾತ್ರಿ ತಮ್ಮ ಜೀವವನ್ನು ತೆತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮೃತ ರಾಜು ಜಿ.ಎನ್. ಅವರು ಗೌರಿಪುರ ಗ್ರಾಮದ ನಿವಾಸಿಯಾಗಿದ್ದು, ಸಂಡೂರು ಕೃಷಿ ಇಲಾಖೆಯಲ್ಲಿ ಗುತ್ತಿಗೆ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಇಲಾಖೆಯ ಅಧಿಕಾರಿಗಳ ವರ್ತನೆಯಿಂದ ಅವರು ಮಾನಸಿಕವಾಗಿ ತೊಂದರೆ ಅನುಭವಿಸುತ್ತಿದ್ದರು ಎನ್ನಲಾಗಿದೆ. ವಿಶೇಷವಾಗಿ ಕೃಷಿ ಇಲಾಖೆಯ ಅಧಿಕಾರಿ ರಾಘವೇಂದ್ರ ಅವರಿಂದ ನಿರಂತರ ಕಿರುಕುಳ ಎದುರಿಸುತ್ತಿದ್ದೇನೆ ಎಂದು ಅವರು ಆತ್ಮಹತ್ಯೆಗೆ ಮುನ್ನ ಬರೆದಿರುವ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.
ಆತ್ಮಹತ್ಯೆಗೂ ಮುನ್ನ ರಾಜು ಅವರು ಮೂರು ಪುಟಗಳ ಡೆತ್ ನೋಟ್ ಬರೆದಿದ್ದು, ಅದರಲ್ಲಿ ತಮ್ಮ ಸಾವಿಗೆ ಯಾರು ಕಾರಣ ಎಂಬುದರ ಕುರಿತು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಡೆತ್ ನೋಟ್‌ನಲ್ಲಿ ಕೃಷಿ ಇಲಾಖೆಯ ಅಧಿಕಾರಿ ರಾಘವೇಂದ್ರ ಅವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವುದು ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ನೀಡಿದೆ. ಈ ಡೆತ್ ನೋಟ್ ಇದೀಗ ತನಿಖೆಗೆ ಮಹತ್ವದ ದಾಖಲೆ ಆಗುವ ಸಾಧ್ಯತೆ ಇದೆ.
ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣ ಸಂಬಂಧ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.
https://youtu.be/b1MRoE2TiLE?si=SnnSlrbHSoKAkLQT
ರಾಜು ಅವರ ಅಕಾಲಿಕ ನಿಧನದಿಂದ ಗೌರಿಪುರ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಒಬ್ಬ ಸಾಮಾನ್ಯ ಗುತ್ತಿಗೆ ನೌಕರನು ಇಲಾಖೆಯ ಒತ್ತಡ ಹಾಗೂ ಕಿರುಕುಳಕ್ಕೆ ಬಲಿಯಾಗಿದ್ದಾನೆಯೇ ಎಂಬ ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಡೆತ್ ನೋಟ್‌ನಲ್ಲಿನ ಉಲ್ಲೇಖಗಳ ಆಧಾರದ ಮೇಲೆ ಸೂಕ್ತ ತನಿಖೆ ನಡೆಸಿ ಸತ್ಯಾಂಶ ಬಹಿರಂಗಪಡಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಈ ಸಂಬಂಧ ಚೋರುನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಪ್ರೇರಣೆ, ಕಿರುಕುಳ ಹಾಗೂ ಇತರ ಅಂಶಗಳ ಕುರಿತು ತನಿಖೆ ಮುಂದುವರಿದಿದೆ. ತನಿಖೆಯ ನಂತರವೇ ರಾಜು ಸಾವಿನ ಹಿಂದಿನ ನಿಜವಾದ ಕಾರಣಗಳು ಬಹಿರಂಗವಾಗಲಿವೆ.