LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಣೇಶ ಹಬ್ಬದ ಪ್ರಯುಕ್ತ ಆ.25ರಿಂದ ಹೆಚ್ಚುವರಿ 1500 ಬಸ್ ಸೌಲಭ್ಯ

ಬೆಂಗಳೂರು: ಗೌರೀ ಗಣೇಶ ಹಬ್ಬದ ನಿಮಿತ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೇಂದ್ರ ಕಛೇರಿಯು ಬೆಂಗಳೂರಿನಿಂದ ವಿಶೇಷವಾಗಿ 1500 ಹೆಚ್ಚುವರಿ ಬಸ್ ಗಳನ್ನು ರಾಜ್ಯದ ಮೂಲೆ ಮೂಲೆಯಲ್ಲಿ ಸಂಚರಿಸಲು ಅನುವು ಮಾಡಿಕೊಡುವ ಮೂಲಕ ಪ್ರಯಾಣಿಕರಿಗೆ ಬಂಪರ್ ಅವಕಾಶ ಒದಗಿಸಿದೆ.

 

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ನಿಗಮವು, ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ ಇದೇ ಆ.26ರಂದು ಸ್ವರ್ಣಗೌರಿ ವ್ರತ ಮತ್ತು ಆ.27ರಂದು ಗಣೇಶ ಚತುರ್ಥಿ ಹಬ್ಬದ ನಿಮಿತ್ತ 1500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಆ.25 ಮತ್ತು 26 ರಂದು ಬೆಂಗಳೂರಿನಿಂದ ಸಂಚರಿಸಲಿವೆ. ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಆ.27 ಹಾಗೂ ಆ.31 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ.

 

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಾಗುವುದು. ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಸಲಾಗುವುದು ಎಂದು ಮಾಹಿತಿ ನೀಡಿದೆ.



ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣA, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ,ಪಿಕ್ ಅಪ್ ಪಾಯಿಂಟ್ನ ಹೆಸರನ್ನು ಗಮನಿಸುವಂತೆ ನಿಗಮವು ಕೋರಿದೆ.

 

ಇ-ಟಿಕೆಟ್ ಬುಕಿಂಗ್ ಅನ್ನು www.ksrtc.karnataka.gov.in  ಮೂಲಕ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.



ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ. ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

 

ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು, ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST