LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಗಂಧೂರು ಕೇಬಲ್‌ ಸೇತುವೆ ಲೋಕಾರ್ಪಣೆ

ಮುಂದಿನ 5 ವರ್ಷಗಳಲ್ಲಿ 5 ಲಕ್ಷ ಕೋಟಿ ಮೊತ್ತದ ಕಾಮಗಾರಿ – ನಿತಿನ್‌ ಗಡ್ಕರಿ

ಬೆಂಗಳೂರು :  ರಾಜ್ಯದ ಅತಿದೊಡ್ಡದಾಗ ಸಿಗಂಧೂರು ಕೇಬಲ್ ಸೇತುವೆಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿಯಲ್ಲಿಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ ಮಾಡಿದರು. ಸ್ಥಳೀಯರು ಮತ್ತು ಪ್ರವಾಸಿಗರಿಗೆ ಈ ಸೇತುವೆಯಿಂದ ಸಾಕಷ್ಟು ಅನುಕೂಲವಾಗಲಿದ್ದು, ಬಹುದಿನಗಳ ಕನಸು ನನಸಾಗಿದೆ.

ಈ ವೇಳೆ, ಕೇಂದ್ರ ಗ್ರಾಹಕ ವ್ಯವಹಾರ ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ ಜೋಶಿ, ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.



ಸುಮಾರು 400 ಕೋಟಿ ರೂಪಾಯಿಗೂ ಅಧಿಕ ಅಂದಾಜು ವೆಚ್ಚದಲ್ಲಿ ದೇಶದಲ್ಲಿ 2ನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆಯಾದ ಅಂಬಾರಗೋಡ್ಲು- ಕಳಸವಳ್ಳಿ- ಸಿಗಂಧೂರು ಸಂಪರ್ಕ ಸೇತುವೆಯನ್ನು ನಿರ್ಮಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶರಾವತಿ ಹಿನ್ನೀರು ಪ್ರದೇಶದ ದ್ವೀಪಗಳನ್ನು ಬೆಸೆಯುವ ಸೇತುವೆ ಇದಾಗಿದ್ದು, ಒಟ್ಟು ಉದ್ದ 2.12 ಕಿಲೋ ಮೀಟರ್ ಇದ್ದು, ಅಗಲ 16 ಮೀಟರ್ ಇದೆ.

ಶರಾವತಿ ಹಿನ್ನೀರು ಪ್ರದೇಶದಲ್ಲಿರುವ ಸಿಗಂಧೂರು ಚೌಡೇಶ್ವರಿ ದೇವಾಲಯಕ್ಕೆ ತೆರಳುವ ಭಕ್ತರು ಈ ಮೊದಲು ಶರಾವತಿ ಹಿನ್ನೀರಿನಲ್ಲಿ ಲಾಂಚ್ ನಲ್ಲಿ ಪ್ರಯಾಣಿಸಬೇಕಿತ್ತು. ಇದೀಗ ಸೇತುವೆ ನಿರ್ಮಾಣದಿಂದ ಭಕ್ತರಿಗೆ ಹಾಗೂ ಅಂಬಾರಗೋಡ್ಲು- ಕಳಸವಳ್ಳಿ ಪ್ರದೇಶಗಳ ಜನರಿಗೆ ಅನುಕೂಲವಾಗಲಿದೆ. ಈ ಸೇತುವೆ ನಿರ್ಮಾಣದಿಂದ ಈ ಪ್ರದೇಶದ ಜನರ ಆರು ದಶಕಗಳ ಕನಸು ನನಸಾದಂತಾಗಿದೆ.

ಬಳಿಕ ಮಾತನಾಡಿದ ಸಚಿವ ನಿತಿನ್‌ ಗಡ್ಕರಿ, ಈ ಸೇತುವೆ ಮತ್ತು ರಸ್ತೆಯನ್ನು ಸಿಗಂಧೂರು ಚೌಡೇಶ್ವರಿ ಮಾತೆಗೆ ಸಮರ್ಪಿಸುವುದಾಗಿ ತಿಳಿಸಿದರು.



ಇದೇವೇಳೆ 2 ಸಾವಿರ ಕೋಟಿಗೂ ಹೆಚ್ಚು ಮೂಲಸೌಕರ್ಯ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯನ್ನು ಅವರು ನೆರವೇರಿಸಿದರು. ಇದೊಂದು ಐತಿಹಾಸಿಕ ಸೇತುವೆ. ಮಾತೆ ಸಿಗಂಧೂರು ಚೌಡೇಶ್ವರಿ ದೇವಿ ಸೇತುವೆ ಎಂದು ಇದರ ಹೆಸರನ್ನು ಪ್ರಕಟಿಸಿದರು.

ಕರ್ನಾಟಕದ ವಿಕಾಸಕ್ಕೆ ಮುಂದಿನ 5 ವರ್ಷಗಳಲ್ಲಿ 5 ಲಕ್ಷ ಕೋಟಿಯ ಕೆಲಸಗಳನ್ನು ಮಾಡಲಾಗುವುದು ಎಂದು ಅವರು ಪ್ರಕಟಿಸಿದರು. 10 ಸಾವಿರ ಕೋಟಿ ಮೊತ್ತದ ಬೆಳಗಾವಿ- ಹುನಗುಂದ- ರಾಯಚೂರು ಚತುಷ್ಪಥ ಕಾಮಗಾರಿ ತ್ವರಿತಗೊಳಿಸಲಾಗುವುದು ಎಂದು ತಿಳಿಸಿದರು. ದೇಶದ ವಿವಿಧೆಡೆ ಆಗಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಅವರು ಮಾಹಿತಿ ಕೊಟ್ಟರು. ದೆಹಲಿ- ಬೆಂಗಳೂರು ನಡುವಿನ ಅಂತರ ಕಡಿಮೆ ಮಾಡುವ ರಸ್ತೆ ಕುರಿತು ಅವರು ವಿವರ ನೀಡಿದರು. ಬೆಂಗಳೂರು -ಮೈಸೂರು ಎಕ್ಸ್‍ಪ್ರೆಸ್ ಹೈವೇ ಈಗಾಗಲೇ ಪೂರ್ಣಗೊಂಡಿದೆ ಎಂದರು.

ಬೆಂಗಳೂರು ವರ್ತುಲ ರಸ್ತೆಯನ್ನು 15 ಸಾವಿರ ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಶೇ 40 ರಷ್ಟು ಕಾಮಗಾರಿ ಮುಗಿದಿದೆ. ಇದು ಶೀಘ್ರ ಪೂರ್ಣವಾಗಲಿದ್ದು, ಬೆಂಗಳೂರಿನ ಸಂಚಾರ ಸಮಸ್ಯೆಗೆ ಪರಿಹಾರ ಸಿಗಲಿದೆ. ಬೆಂಗಳೂರು- ಮಂಗಳೂರು ರಸ್ತೆ ಅಭಿವೃದ್ಧಿ ಸೇರಿ ವಿವಿಧ ನೂತನ ಯೋಜನೆಗಳ ಕುರಿತು ಅವರು ಪ್ರಕಟಿಸಿದರು. ಶಿವಮೊಗ್ಗ- ಮಂಗಳೂರು ಚತುಷ್ಪಥದ ಡಿಪಿಆರ್ ಮಾಡಲಾಗುತ್ತಿದೆ ಎಂದರು.



ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಈ ಭಾಗದ ಬಹುವರ್ಷಗಳ ಕನಸು ಇಂದು ನನಸಾಗಿದೆ. ಇಡೀ ದೇಶಕ್ಕೆ ಇದು ಪ್ರಗತಿಯ ಮೈಲಿಗಲ್ಲು. ಇದು ಜನರ ವಿಶ್ವಾಸ- ಜನಪ್ರತಿನಿಧಿಗಳ ಪರಿಶ್ರಮದ ಪ್ರತಿಫಲ ಎಂದರು. ಆಗುಂಬೆ ಘಾಟ್‍ನಲ್ಲಿ ಸುರಂಗ ಮಾರ್ಗ ನಿರ್ಮಾಣ, ಶಿವಮೊಗ್ಗ ಬೈಪಾಸ್ ವರ್ತುಲ ರಸ್ತೆ ಸೇರಿ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಅವರು ಮನವಿ ಮಾಡಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ಮ್ಯಾನ್ ಆಫ್ ನ್ಯಾಷನಲ್ ಹೈವೇಸ್ ಎಂಬ ಹೆಸರು ಗಡ್ಕರಿಯವರಿಗೆ ಸರಿಹೊಂದುತ್ತದೆ. ಗಡ್ಕರಿ ಅವರು ತಾವು ಶಂಕುಸ್ಥಾಪನೆ ಮಾಡಿದ್ದನ್ನು ತಾವೇ ಉದ್ಘಾಟಿಸುವ ಪ್ರಧಾನಿಯವರ ಸೂಚನೆಯನ್ನು ಪಾಲಿಸುತ್ತಿದ್ದಾರೆ. ಸೇತುವೆಗಾಗಿ ವ್ಯಾಪಕ ಹೋರಾಟ ನಡೆದಿತ್ತು. ಮೋದಿಯವರ ನೇತೃತ್ವದಲ್ಲಿ 2047ಕ್ಕೆ ಭಾರತವು ವಿಕಸಿತ ದೇಶ ಆಗಲಿದೆ. ಮೂರನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಾತಾ ಚೌಡೇಶ್ವರಿ ಸೇತುವೆ ಎಂದು ಹೆಸರು ನಾಮಕರಣ ಮಾಡಲು ವಿನಂತಿಸಿದರು.

ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಮಾತನಾಡಿ, ಇದು ಸಾಗರದ ಇತಿಹಾಸದಲ್ಲಿ ಬಂಗಾರದಿಂದ ಬರೆದಂಥ ಕಾರ್ಯಕ್ರಮ ಎಂದು ಮೆಚ್ಚುಗೆ ಸೂಚಿಸಿದರು.



ಸಂಸದ ಬಿ.ವೈ.ರಾಘವೇಂದ್ರ 60 ವರ್ಷಗಳ ಕನಸನ್ನು ಕೇವಲ 6 ವರ್ಷಗಳಲ್ಲಿ ಇದನ್ನು ಅನುಷ್ಠಾನಕ್ಕೆ ತಂದ ನಿತಿನ್ ಗಡ್ಕರಿ, ಯಡಿಯೂರಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಈ ಸೇತುವೆಗೆ ಸಿಗಂದೂರು ಚೌಡೇಶ್ವರಿ ಹೆಸರನ್ನು ಸೂಚಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಿದರು.

ಶಾಸಕರಾದ ಅರಗ ಜ್ಞಾನೇಂದ್ರ, ಚನ್ನಬಸಪ್ಪ, ಹರತಾಳು ಹಾಲಪ್ಪ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ  ಭಾರತಿ ಶೆಟ್ಟಿ, ಡಿ.ಎಸ್.ಅರುಣ್, ಧನಂಜಯ ಸರ್ಜಿ, ಸಿಮೆಂಟ್ ಮಂಜುನಾಥ್, ಶ್ರೀಮತಿ ಹೇಮಲತಾ ನಾಯಕ್, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾಧ್ಯಕ್ಷ ಜಗದೀಶ್, ಪ್ರಸನ್ನ ಕೆರೆಕೈ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ರೈತ ಮುಖಂಡರು, ಕಾರ್ಯಕರ್ತರು, ಸಿಗಂದೂರು ಚೌಡೇಶ್ವರಿ ದೇವಿಯ ಭಕ್ತರು ಹಾಗೂ ಸಾರ್ವಜನಿಕ ಬಂಧುಗಳು ಭಾಗವಹಿಸಿದ್ದರು. ನಿತಿನ್ ಗಡ್ಕರಿ, ಪ್ರಲ್ಹಾದ್ ಜೋಶಿ, ಯಡಿಯೂರಪ್ಪ, ಕಾಗೋಡು ತಿಮ್ಮಪ್ಪ, ಪರಮೇಶ್ವರಪ್ಪ ಮೊದಲಾದ ಅನೇಕರನ್ನು ಗೌರವಿಸಲಾಯಿತು.

ಸೇತುವೆ ಉದ್ಘಾಟನೆ ಬಳಿಕ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪ್ರಲ್ಹಾದ ಜೋಶಿ ಸೇರಿದಂತೆ ಗಣ್ಯರು ಸಿಗಂಧೂರು ಚೌಢೇಶ್ವರಿ ದೇಗುಲಕ್ಕೆ ಭೇಟಿ ನೀಡಿ, ದರ್ಶನ ಪಡೆದರು.



ಕೇಂದ್ರದಿಂದ ಶಿಷ್ಟಾಚಾರ ಉಲ್ಲಂಘನೆ: ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಭಾಗಿಯಾಗಿಲ್ಲ: ಸಿದ್ದರಾಮಯ್ಯ

 ಸಿಗಂದೂರು ಸೇತುವೆ ಉದ್ಘಾಟನೆ ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ತಾವು ಪಾಲ್ಗೊಳ್ಳುತ್ತಿಲ್ಲ. ಶಿಷ್ಟಾಚಾರ ಪಾಲನೆಯಾಗದ ಹಿನ್ನೆಲೆಯಲ್ಲಿ ಕೇಂದ್ರದ ಧೋರಣೆ ವಿರೋಧಿಸಿ ಕಾರ್ಯಕ್ರಮದಲ್ಲಿ ತಾವು ಪಾಲ್ಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆದಿದ್ದೆ. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮವನ್ನು ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ.

ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು  ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ.  ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಣ ನೀಡಲಾಗಿಲ್ಲ ಎಂದರು.

ಭಾರತೀಯ ಚಿತ್ರರಂಗದ ಖ್ಯಾತ ಚಿತ್ರನಟಿ ಬಿ.ಸರೋಜಾದೇವಿ ಅವರ ನಿಧನದ ಬಗ್ಗೆ ಸಂತಾಪ ಸೂಚಿಸುತ್ತಾ ಮಾತನಾಡಿದ ಮುಖ್ಯಮಂತ್ರಿಗಳು, ಬಿ.ಸರೋಜಾದೇವಿಯವರು ಕನ್ನಡ ನಾಡು ಕಂಡ ಪ್ರತಿಭಾವಂತ ಕಲಾವಿದರಾಗಿದ್ದರು. ಬಹುಭಾಷಾ ನಟಿಯಾಗಿದ್ದ ಅವರು ಅಪ್ರತಿಮ ಕಲಾವಿದರಾಗಿದ್ದು, ಅವರ ಸಾವಿನಿಂದ ಇಡೀ ಕಲಾಜಗತ್ತು ಬಡವಾಗಿದೆ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ದು:ಖವನ್ನು ಭರಿಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST