ಬೆಂಗಳೂರು : ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು, ಡಾ. ವಿಷ್ಣುವರ್ಧನ್ ಹಾಗೂ ಬಹುಭಾಷಾ ನಟಿ ಬಿ. ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ನೀಡಲು ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. ನಾಡಿನ ಹೆಮ್ಮೆಯ ಕವಿ ಕುವೆಂಪು ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಬೇಕು ಎಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.
ಸೆಪ್ಟೆಂಬರ್ 18 ರಂದು ವಿಷ್ಣುವರ್ಧನ್ ಅವರ ಜನ್ಮ ದಿನವಿದ್ದು, ಅಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕಾರ್ಯಕ್ರಮದ ರೂಪುರೇಷೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತೀರ್ಮಾನಿಸುತ್ತದೆ ಎಂದರು.


ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ವರ್ಧನ್ ಸ್ಮಾರಕ ನಿರ್ಮಿಸುವ ಬಗ್ಗೆ ಚರ್ಚೆಯಾಗಿಲ್ಲ. ಆದರೆ ಮುಖ್ಯಮಂತ್ರಿ ಅವರ ಜೊತೆ ಅವರ ಕುಟುಂಬದವರು ಮತ್ತು ಅಭಿಯಾನಿಗಳು ಈಗಾಗಲೇ ಚರ್ಚೆ ನಡೆಸಿದ್ದಾರೆ ಎಂದರು. ಸ್ಥಳೀಯ ಸಂಸ್ಥೆಗಳಲ್ಲಿ ಮತಪತ್ರ ಬಳಕೆ ಕುರಿತಂತೆ ಇಂದಿನ ಸಭೆಯಲ್ಲಿ ಯಾವುದೇ ಚರ್ಚೆ ನಡೆಯಲಿಲ್ಲ ಎಂದು ಸ್ಪಷ್ಟಪಡಿಸಿದರು.